
ಸಕಲೇಶಪುರ : ಚಂಪಕನಗರದಲ್ಲಿ ಹುಚ್ಚು ನಾಯಿಯ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಭೀತಿ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಸೇರಿದಂತೆ ಸುಮಾರು ಆರು ಜನರಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಒಂದೇ ಹಸುವಿನ ಮೇಲೂ ನಾಯಿ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ. ನಾಯಿಯು ಗ್ರಾಮದಲ್ಲಿ ಜನರು ಓಡಾಡುವ ಪ್ರದೇಶಗಳಲ್ಲಿ ಅಡ್ಡಾಡುತ್ತಾ ದಾಳಿ ನಡೆಸುತ್ತಿರುವುದರಿಂದ ಸಾರ್ವಜನಿಕರು ಮನೆಯಿಂದ ಹೊರಬರಲು ಭಯಪಡುವ ಪರಿಸ್ಥಿತಿ ಉಂಟಾಗಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ರೈತರು ಎಚ್ಚರಿಕೆಯಿಂದ ಓಡಾಡುವಂತಾಗಿದೆ. ಗ್ರಾಮದಲ್ಲಿ ಹುಚ್ಚು ನಾಯಿಯ ಹಾವಳಿಯನ್ನು ತಕ್ಷಣ ನಿಯಂತ್ರಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ಹುಚ್ಚು ನಾಯಿಯನ್ನು ಹಿಡಿದು ಜನರಿಗೆ ಹಾಗೂ ಜಾನುವಾರುಗಳಿಗೆ ಮತ್ತಷ್ಟು ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.




