ಹಾಸನ: ಖಾಸಗಿ ಶಾಲೆಯ ಬಸ್ ಚಾಲಕನ ಲೈಂಗಿಕ ದೌರ್ಜನ್ಯಕ್ಕೊಳಗಾದ 10ನೇ ತರಗತಿಯ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಚಾಲಕ ರಂಜಿತ್ ಎಂಬಾತ ಎಸೆಸೆಲ್ಸಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿ 8 ತಿಂಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯು 2 ದಿನಗಳ ಹಿಂದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ವೇಳೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಪೋಷಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋದಾಗ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ಬಳಿಕ ಹಾಸನದ ಹಿಮ್ಸ್ ಆಸ್ಪತ್ರೆಗೆ ಬಾಲಕಿಯನ್ನು ದಾಖಲು ಮಾಡಿದ ಅನಂತರ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿರುವ ವೈದ್ಯರು ಅವರನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಆರೋಪಿ ರಂಜಿತ್‌ಗೆ ಈಗಾಗಲೇ ವಿವಾಹವಾಗಿದ್ದು, 2 ಮಕ್ಕಳ ತಂದೆ ಎಂದು ತಿಳಿದು ಬಂದಿದೆ.




