ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಣಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂಥ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳ ಜನನ ನಿಯಂತ್ರಣ ಸೇರಿದಂತೆ ಸೂಕ್ತ ಕ್ರಮ ನಿರ್ವಹಿಸಬೇಕು ಎಂದರು.
ನಾಯಿ ಕಡಿತ, ಹಾವು ಕಡಿತ ಮತ್ತಿತರ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನೀಡಬೇಕಾದ ಚುಚ್ಚುಮದ್ದು ಹಾಗೂ ಇತರೆ ಅಗತ್ಯ ಔಷಧಿಗಳನ್ನು ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಸಂಗ್ರಹಿಸಿಡಬೇಕು. ಸಾರ್ವಜನಿಕರು ಇಂತಹ ಪ್ರಕರಣಗಳಲ್ಲಿ ವಿಳಂಬಿಸದೆ, ಆದಷ್ಟು ಬೇಗನೇ ಚಿಕಿತ್ಸೆ ಪಡೆದರೆ ಅಪಾಯದಿಂದ ಪಾರಾಗಬಹುದು ಎಂದು ತಿಳಿಸಿದರು.




