ಬೆಂಗಳೂರು, ಜುಲೈ 31: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ ಆಗುತ್ತಿದೆ. ನಾಪತ್ತೆಯಾದ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಮುಂದುವರೆದಿದೆ. ಸಿಎಂ ಸಿದ್ದರಾಮಯ್ಯ ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ರೂ. ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ಕೇರಳ ಸಿಎಂ ಜೊತೆ ಮಾತನಾಡಿದ ಸಿದ್ದರಾಮಯ್ಯ
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಇಂದು ಮಾತನಾಡಿ ವಯನಾಡು ಭೂಕುಸಿತದಿಂದುಂಟಾದ ಸಾವು ನೋವಿನ ಬಗ್ಗೆ ನನ್ನ ಕಳವಳ ವ್ಯಕ್ತಪಡಿಸಿ, ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವ ಜನರ ರಕ್ಷಣಾ ಕಾರ್ಯ, ಆಹಾರ, ನೀರು, ವೈದ್ಯಕೀಯ ನೆರವು ಸೇರಿದಂತೆ ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿದ್ದೇನೆ.