ಉಡುಪಿ: ರಂಗಕರ್ಮಿ ಕಾಪು ಲೀಲಾಧರ ಶೆಟ್ಟಿ ಅವರು ಪತ್ನಿ ಸಮೇತ ನೇಣಿಗೆ ಶರಣಾಗಿದ್ದಾರೆ. ಲೀಲಾಧರ ಶೆಟ್ಟಿ ಅವರಿಗೆ 68 ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ ಅವರಿಗೆ 58 ವಯಸ್ಸಾಗಿತ್ತು. ಡಿ.12ರಂದು ಮಧ್ಯರಾತ್ರಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದುಕೊಂಡು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಲೀಲಾಧರ ಶೆಟ್ಟಿ ಅವರು ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು ಭಾಗದಲ್ಲಿ ಲೀಲಣ್ಣ ಎಂದೇ ಪ್ರಸಿದ್ದಿ ಪಡೆದಿದ್ದರು. ಕಾಪು ರಂಗ ತರಂಗ ನಾಟಕ ತಂಡವನ್ನು ಕಟ್ಟಿಕೊಂಡು ಹಲವು ಕಡೆಗಳಲ್ಲಿ ಪ್ರದರ್ಶನ ನೀಡುತ್ತಿದ್ದರು.
ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದ ಲೀಲಾಧರ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಮಜೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು.
ಆಸುಪಾಸಿನ ಹಲವಾರು ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ಧಾರದಲ್ಲಿ ಮುಂಚೂಣಿಯಲ್ಲಿದ್ದರು. ಪ್ರಸ್ತುತ ಕರಂದಾಡಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿ, ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗ್ರಾಮ ಪ್ರಚಾರ ಸಮಿತಿ ಪ್ರಧಾನ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಡಿ.13ರಂದು ಸಂಜೆ 4 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.