ಮಂಗಳೂರು: ಶಾಲಾ ಪರೀಕ್ಷೆಯ ಗಣಿತ ವಿಷಯದಲ್ಲಿ ಕಡಿಮೆ ಅಂಕ ನೀಡಿದರೆಂಬ ಕಾರಣಕ್ಕೆ ವಿದ್ಯಾರ್ಥಿನಿಯರಿಬ್ಬರು ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮೀರಿದ ಮಾತ್ರೆ ಹಾಕಿದ ಘಟನೆ ಮಂಗಳೂರಿನ ಉಳ್ಳಾಲದ ಖಾಸಗಿ ಶಾಲೆಯಲ್ಲಿ ನಡೆದಿದೆ.
ಸ್ಟಾಫ್ ರೂಮ್ ನಲ್ಲಿ ಶಿಕ್ಷಕಿಯರಿಲ್ಲದ ಸಂದರ್ಭ ನೋಡಿಕೊಂಡು ಇಬ್ಬರು ವಿದ್ಯಾರ್ಥಿನಿಯರು ಸೇರಿ ಗಣಿತ ಶಿಕ್ಷಕಿಗೆ ಸೇರಿದ ವಾಟರ್ ಬಾಟಲಿಗೆ ಮಾತ್ರೆಗಳನ್ನು ಹಾಕಿದ್ದು, ಇದೇ ಬಾಟಲಿಯ ನೀರನ್ನು ಗಣಿತ ಶಿಕ್ಷಕಿ ಜತೆ ಇನ್ನೋರ್ವ ಶಿಕ್ಷಕಿಯೂ ಕುಡಿದಿದ್ದಾರೆ.
ಸ್ವಲ್ಪ ಹೊತ್ತಿನಲ್ಲಿ ಶಿಕ್ಷಕಿಯೊಬ್ಬರಿಗೆ ಅಸ್ವಸ್ಥತೆ ಕಂಡುಬಂದಿದೆ. ಇನ್ನೋರ್ವ ಶಿಕ್ಷಕಿಗೆ ಮುಖದಲ್ಲಿ ಊತ ಉಂಟಾಗಿದೆ. ನೀರಿನ ರುಚಿಯಲ್ಲಿ ಬದಲಾವಣೆ ಕಂಡುಬಂದು ಸೂಕ್ಷ್ಮವಾಗಿ ಗಮನಿಸಿದಾಗ ನೀರಲ್ಲಿ ಮಾತ್ರೆಗಳಿರುವುದು ಕಂಡುಬಂದಿದೆ. ಈ ಕುರಿತು ವಿಚಾರಿಸಿ ಸಿಸಿಟಿವಿ ಗಮನಿಸಿದಾಗ ವಿದ್ಯಾರ್ಥಿನಿಯರ ಕೃತ್ಯ ಬೆಳಕಿಗೆ ಬಂದಿದೆ.
ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ಕಾರುಬಾರು ಮಾಡುವ ವಿದ್ಯಾರ್ಥಿನಿಯ ನಡೆಗೆ ಇಡೀ ಶಾಲಾ ಆಡಳಿತ ಮಂಡಳಿ, ಹೆತ್ತವರು ನಿಬ್ಬೆರಗಾಗಿದ್ದಾರೆ. ಇದೀಗ ಶಾಲೆಯ ಆಡಳಿತ ಮಂಡಳಿ ತುರ್ತು ಎಸ್.ಡಿ.ಎಂ.ಸಿ ಸಭೆ ನಡೆಸಿ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ನಿರ್ಧರಿಸಿದೆ.