ಕಲ್ಲಡ್ಕ : ಕಲ್ಲಡ್ಕದಲ್ಲಿ ಮೂರುದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿಯ ಸರ್ವಿಸ್ ರಸ್ತೆ ಸಂಪೂರ್ಣ ಕೆಸರುಮಯಗೊಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿದೆ.
ಬಿ.ಸಿ.ರೋಡು- ಅಡ್ಡಹೊಳೆ ಚತುಪ್ಪಥ ರಸ್ತೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ರಸ್ತೆ ಬದಿ ಸೂಕ್ತ ಚರಂಡಿ ಇಲ್ಲದೆ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದೆ. ಕಳೆದ ವರ್ಷವೂ ಭಾರಿ ವಾಹನಗಳು ಕೆಸರಿನಲ್ಲಿ ಸಿಲುಕಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈ ಬಾರಿ ದ್ವಿಚಕ್ರ ವಾಹನ ಸವಾರರು ಜಾರಿ ಬೀಳುವ ಸ್ಥಿತಿ ಉಂಟಾಗಿದೆ. ಆದರೆ ಜನಪ್ರತಿನಿಧಿಗಳು ಸೇರಿದಂತೆ ಹೆದ್ದಾರಿ ಇಲಾಖೆ, ಗುತ್ತಿಗೆ ಸಂಸ್ಥೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ವಾಹನ ಸವಾರರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ನೇತೃತ್ವದಲ್ಲಿ ತಹಶೀಲ್ದಾರ್ ಅರ್ಚನಾ ಡಿ.ಭಟ್ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಕಳೆದ ವಾರ ಭೇಟಿನೀಡಿ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಗುತ್ತಿಗೆ ಸಂಸ್ಥೆ ಎಂಜಿನಿಯರ್ ಜತೆ ಮಾತುಕತೆ ನಡೆಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದರು. ಆದರೆ, ಗುತ್ತಿಗೆ ಸಂಸ್ಥೆ ಇದಕ್ಕೆ ಸ್ಪಂದಿಸದ ಕಾರಣ ಸಾರ್ವಜನಿಕರು ಪರದಾಡುವಂತಾಗಿದೆ.