ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ.
ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು, ಪಕ್ಷಕ್ಕೆ ತಾವು ಮುಜುಗರ ಮಾಡುವಂತ ಸನ್ನಿವೇಶವನ್ನು ನಿರ್ಮಾಣ ಮಾಡಿದ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಪಂಚಾಯತ್‌ಗೆ ಸಂಬಂಧ ಪಟ್ಟ
ಕೆಲವೊಂದು ನಿರ್ಧಾರಗಳನ್ನು ಪಕ್ಷದ ಪಂಚಾಯತ್ ಸದಸ್ಯರ ಗಮನಕ್ಕೆ ತರದೆ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಹಾಗು ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.