
ಸಕಲೇಶಪುರ : ತಾಲ್ಲೂಕಿನ ಬಾಣಾವಸೆ ಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡೈರಿಗೆ ಹಾಲು ಹಾಕಿ ವಾಪಸ್ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಬಾಣಾವಸೆ ಕಡೆಯಿಂದ ಬರುತ್ತಿದ್ದ ಈಶ್ವರ್ (55) ಹಾಗೂ ರಾಜಣ್ಣ (58) ಅವರು ಡೈರಿಗೆ ಹಾಲು ಹಾಕಿ ಹಿಂದಿರುಗುತ್ತಿದ್ದ ವೇಳೆ, ಸಕಲೇಶಪುರ ಕಡೆಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಕ್ಷಣವೇ ಸಕಲೇಶಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದುಬಂದಿದೆ.




