ಉಡುಪಿ ಜಿಲ್ಲೆಯಲ್ಲಿ 14331 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ; ಜಿಲ್ಲೆಯ 51 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ

Share with

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆಯು ಮಾರ್ಚ್ 25ರಿಂದ ಏಪ್ರಿಲ್ 6ವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಶಿಸ್ತು ಹಾಗೂ ಸಮನ್ವಯದೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆ

ಅವರು ಮಾ.16ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಹೊಸದಾಗಿ 13454, 233 ಖಾಸಗಿ ಅಭ್ಯರ್ಥಿಗಳು, 578 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 65 ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 7471 ಗಂಡು ಮಕ್ಕಳು ಹಾಗೂ 7860 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 14331 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಉಡುಪಿಯಲ್ಲಿ 15, ಬ್ರಹ್ಮಾವರದಲ್ಲಿ 11, ಕಾರ್ಕಳದಲ್ಲಿ 9, ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ತಪ್ಪದೇ ಅಳವಡಿಸಬೇಕು ಎಂದ ಅವರು, 51 ಪರೀಕ್ಷಾ ಕೇಂದ್ರಗಳಲ್ಲಿ 652 ಕೊಠಡಿ ಮೇಲ್ವಿಚಾರಕರು, 51 ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು ಹಾಗೂ 51 ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ಈಗಾಗಲೇ ನೇಮಿಸಲಾಗಿದೆ ಎಂದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ವಾಚ್‌ಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ ಎಂದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರಗಳನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳಾಗದಂತೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದ ಅವರು, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಲಾಗುವುದು ಎಂದರು. ಸಭೆಯಲ್ಲಿ ಎಸ್‌ಪಿ ಡಾ.ಸಿದ್ಧಲಿಂಗಪ್ಪ, ಎಸ್.ಎಸ್.ಎಲ್.ಸಿ ನೋಡೆಲ್ ಅಧಿಕಾರಿ ಮಂಗಳೂರು ಸಿ.ಟಿ.ಇ ಪ್ರಾಂಶುಪಾಲ ಸಿಂಪ್ರಿನ್ ಮಂಥರೋ, ಜಿಲ್ಲಾ ಖಜಾನಾಧಿಕಾರಿ ರಂಗಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *