
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳ ಕೊರತೆ, ರಾತ್ರಿ ವೇಳೆ ವೈದ್ಯರ ಅಲಭ್ಯತೆ, ತುರ್ತು ಹೆರಿಗೆ ಸೇವೆಗಳ ಸಮಸ್ಯೆ ಹಾಗೂ ಆ್ಯಂಬುಲೆನ್ಸ್ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದ ಗ್ರಾಮೀಣ ಭಾಗದ ಬಡ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಯೂತ್ ಲಯನ್ಸ್ ಫೆಡರೇಷನ್, ಸಕಲೇಶಪುರ ಹಾಗೂ ಸ್ಥಳೀಯ ಗ್ರಾಮಸ್ಥರು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಹೆತ್ತೂರು ಗ್ರಾಮದ ಷಣ್ಮುಖ ಅವರ ಪುತ್ರಿ, ಹೆತ್ತೂರು ಹೋಬಳಿಯ ಎ ಬ್ಲಾಕ್ ನಿವಾಸಿ ಅಂಬಿಕಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಸುಮಾರು ಮೂರು ಗಂಟೆಗಳ ಕಾಲ ಚಿಕಿತ್ಸೆ ನೀಡಿದ ಬಳಿಕ ಮಗುವಿನ ಸ್ಥಿತಿ ಅನುಕೂಲಕರವಾಗಿಲ್ಲವೆಂದು ತಿಳಿಸಿ, ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವಂತೆ ಸಿಬ್ಬಂದಿ ಮಂಜುಳಾ ಅವರು ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಸಮರ್ಪಕವಾಗಿ ದೊರೆಯದ ಕಾರಣ ಸಕಲೇಶಪುರಕ್ಕೆ ಕರೆದೊಯ್ಯಲು ವಿಳಂಬವಾಯಿತು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಹಿಂದೆಯೂ ಇಂತಹ ಸಮಸ್ಯೆಗಳು ಎದುರಾಗಿದ್ದವು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೊಡ್ಡಕಲ್ಲೂರು ಗ್ರಾಮದ ಬಾಲಕನೊಬ್ಬ ಹಾವು ಕಚ್ಚಿ ಮೃತಪಟ್ಟ ಘಟನೆ ಸೇರಿದಂತೆ, ಈ ಭಾಗದಲ್ಲಿ ತುರ್ತು ಆರೋಗ್ಯ ಸೇವೆಗಳ ಕೊರತೆಯ ಕುರಿತು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹೆತ್ತೂರು ಗ್ರಾಮದ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣದಲ್ಲಿಯೂ ಆಸ್ಪತ್ರೆಯ ಆಡಳಿತ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ, ಸಿಬ್ಬಂದಿ ಮಂಜುಳಾ ಅವರನ್ನು ಕೆಲಸದಿಂದ ವಜಾಗೊಳಿಸುವಂತೆ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧ ತನಿಖೆ ನಡೆಸಲು ಕ್ರಮ ಕೈಗೊಳ್ಳಲಾಗಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಹೆತ್ತೂರು ಹೋಬಳಿ ಕೇಂದ್ರವಾಗಿರುವುದರಿಂದ ಸುತ್ತಮುತ್ತಲಿನ ಅನೇಕ ಗ್ರಾಮಗಳ ಜನರು ಇದೇ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಆದ್ದರಿಂದ ಇಲ್ಲಿ ದಿನದ 24 ಗಂಟೆಯೂ ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಹಿಳಾ ವೈದ್ಯರು ಸೇರಿದಂತೆ ಕನಿಷ್ಠ ಇಬ್ಬರು ವೈದ್ಯರನ್ನು ನೇಮಕ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ತಕ್ಷಣವೇ ಉನ್ನತ ಮಟ್ಟದ ಆಸ್ಪತ್ರೆಗೆ ಕರೆದೊಯ್ಯಲು ಸುಸಜ್ಜಿತ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡುವುದರ ಜೊತೆಗೆ ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವಂತೆ ಯೂತ್ ಲಯನ್ಸ್ ಫೆಡರೇಷನ್ ಹಾಗೂ ಗ್ರಾಮಸ್ಥರು ಪಟ್ಟು ಹಿಡಿದರು. ತಾಲ್ಲೂಕು ಆರೋಗ್ಯಾಧಿಕಾರಿಗಳು ಗೈರಾಗಿದ್ದ ಹಿನ್ನೆಲೆಯಲ್ಲಿ ಅವರ ಬದಲಿಗೆ ಕರ್ತವ್ಯದಲ್ಲಿದ್ದ ರಮೇಶ್ ಅವರನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿಗಳು ಆಗಮಿಸಿದ ಬಳಿಕವೇ ಆ್ಯಂಬುಲೆನ್ಸ್ ಪ್ರತ್ಯಕ್ಷವಾಯಿತು ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.ಹೆತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಆಸ್ಪತ್ರೆಯ ವ್ಯವಸ್ಥೆಯನ್ನು ಸುಧಾರಿಸಿ, ವೈದ್ಯಕೀಯ ಸೌಲಭ್ಯಗಳನ್ನು ಬಲಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯೂತ್ ಲಯನ್ಸ್ ಫೆಡರೇಷನ್ ಅಧ್ಯಕ್ಷ ಸ್ಟೀವನ್ ಪ್ರಕಾಶ್, ಉಪಾಧ್ಯಕ್ಷ ನಾಗೇಶ್ ಎಂ.ಎಚ್. ಮಾಗೇರಿ, ಪ್ರಧಾನ ಕಾರ್ಯದರ್ಶಿ ಯೋಗೇಶ್ ದೊಡ್ಡಕಲ್ಲೂರು, ಕಾರ್ಯದರ್ಶಿ ವಿಕ್ರಮ್ ಹೆತ್ತೂರು, ದಲಿತ ಹಿರಿಯ ಮುಖಂಡ ಹಾಗೂ ನಿವೃತ್ತ ಪಿಡಿಒ ಕೋಮರಯ್ಯ, ಹೆತ್ತೂರು ಅಣ್ಣಯ್ಯ, ವಿರೇಶ್ ವಳಲಹಳ್ಳಿ, ಹೆತ್ತೂರು ಕಾಫಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.




