ಕಾಡಾನೆ ದಾಳಿಗೆ ಮಹಿಳೆ ಬಲಿ; ಗ್ರಾಮಸ್ಥರಲ್ಲಿ ಆತಂಕ!

Share with



ಹಾಸನ :ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಶಾವರ ಗ್ರಾಮದ ಸಮೀಪ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ದಾರುಣವಾಗಿ ಬಲಿಯಾಗಿರುವ ಘಟನೆ ನಡೆದಿದೆ. ಚೌಡಳ್ಳಿ ಗ್ರಾಮದ ಜಯಮ್ಮ (48) ಅವರು ಎಂದಿನಂತೆ ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಎದುರಾದ ಒಂಟಿಸಲಗ ಅವರ ಮೇಲೆ ದಾಳಿ ನಡೆಸಿದೆ. ಕಾಡಾನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಆನೆ ಕಾಲಿನಿಂದ ತುಳಿದ ಪರಿಣಾಮ ಜಯಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಸುಮಾರು 17 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಆತಂಕ ಮನೆಮಾಡಿತ್ತು. ಇದೀಗ ಹಿಂಡಿನಿಂದ ಬೇರ್ಪಟ್ಟಿದ್ದ ಒಂಟಿಸಲಗ ಮಹಿಳೆಯ ಮೇಲೆ ದಾಳಿ ನಡೆಸಿರುವುದು ಗ್ರಾಮಸ್ಥರಲ್ಲಿ ಮತ್ತಷ್ಟು ಭಯದ ವಾತಾವರಣ ಸೃಷ್ಟಿಸಿದೆ. ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇಲೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರು, ಕೃಷಿಕರು ಹಾಗೂ ಗ್ರಾಮಸ್ಥರು ಜೀವಭಯದಲ್ಲೇ ಜೀವನ ನಡೆಸುವಂತಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದ ಜನರು ತಮ್ಮ ದೈನಂದಿನ ಕೆಲಸಗಳಿಗೂ ಹೊರಗೆ ಹೋಗಲು ಆತಂಕಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಕಾಡಂಚಿನ ಗ್ರಾಮಗಳ ಜನರ ಜೀವ ಮತ್ತು ಆಸ್ತಿಪಾಸ್ತಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.


Share with

Leave a Reply

Your email address will not be published. Required fields are marked *